ಮಡಿಕೇರಿ : ಪ್ರತಿ ಬಡ ಕುಟುಂಬವೂ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು. ಜೊತೆಗೆ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ.
ಇಂಧನ ಇಲಾಖೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ‘ಉಚಿತ ಬೆಳಕು, ಸುಸ್ಥಿರ ಬದುಕು’ ಕಾರ್ಯಕ್ರಮದಡಿ ‘ಶೂನ್ಯ ವಿದ್ಯುತ್ ಬಿಲ್ಲು’ ನೀಡುವ ಮೂಲಕ ‘ಗೃಹ ಜ್ಯೋತಿ’ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಮತ್ತು ರಾಷ್ಟ್ರ ಅಭಿವೃದ್ಧಿ ಹೊಂದಲು ಎಲ್ಲಾ ಜಾತಿ, ಉಪ ಜಾತಿ, ಧರ್ಮದ ಜನರ ಜೀವನ ಮಟ್ಟ ಸುಧಾರಣೆ ಕಂಡಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ಆ ನಿಟ್ಟಿನಲ್ಲಿ ಬಡ ಜನರ ಕಲ್ಯಾಣಕ್ಕಾಗಿ ಸರ್ಕಾರ 5 ಗ್ಯಾರಂಟಿ ಯೋಜನೆಗಳಲ್ಲಿ 4 ಯೋಜನೆಗಳನ್ನು ಈಗಾಗಲೇ ಕಾರ್ಯರೂಪಗೊಳಿಸಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ 1.30 ಲಕ್ಷ ಮಂದಿ ಹೆಸರು ನೋಂದಾಯಿಸಿದ್ದು, 2.90 ಕೋಟಿ ರೂ ವನ್ನು ಸರ್ಕಾರ ಭರಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.
ಗೃಹ ಜ್ಯೋತಿ ಜೊತೆಗೆ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ ಹೀಗೆ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸರ್ಕಾರ ವಾರ್ಷಿಕ 60 ಸಾವಿರ ಕೋಟಿ ರೂ ಭರಿಸುತ್ತದೆ. ಡಿಸೆಂಬರ್ ವೇಳೆಗೆ ಎಲ್ಲಾ ಯೋಜನೆಗಳು ಜಾರಿಗೊಳ್ಳಲಿವೆ ಎಂದು ಎನ್.ಎಸ್.ಭೋಸರಾಜು ಅವರು ತಿಳಿಸಿದರು.
ಇಂದಿನ ದಿನನಿತ್ಯ ಬಳಸುವ ವಸ್ತುಗಳ ಬೆಲೆ ಗಗನಕ್ಕೆರಿದ್ದು, ಸಾಧ್ಯವಾದಷ್ಟು ಬಡ ಜನರಿಗೆ ಉತ್ತಮ ಜೀವನ ನಡೆಸಲು ಗ್ಯಾರಂಟಿ ಯೋಜನೆಗಳು ಸಹಕಾರಿ ಆಗಲಿವೆ ಎಂದು ಸಚಿವರು ನುಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ತಳ ಸಮುದಾಯಗಳ ಜನರನ್ನು ಮೇಲೆತ್ತಲು ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.ಹಿಂದೆ ಸರ್ಕಾರಿ ಬಸ್ಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಜನರು ಪ್ರಯಾಣ ಮಾಡುತ್ತಿದ್ದರು, ‘ಶಕ್ತಿ’ ಯೋಜನೆ ಜಾರಿಗೊಂಡ ನಂತರ ಬಸ್ನ ಆಸನಗಳು ಭರ್ತಿಯಾಗಿ ಸಂಚರಿಸುತ್ತಿದ್ದು, ಸರ್ಕಾರಿ ಸಾರಿಗೆ ಸಂಸ್ಥೆ ಮತ್ತಷ್ಟು ಸದೃಢವಾಗುವತ್ತ ಸಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು.