ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದ್ದು, 7 ಜನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ದೂರು ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಲರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಪತ್ರ ಬರೆದಿದ್ದು, ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಕೇಳಿಬಂದಿರುವ ಲಂಚದ ಆರೋಪ, ದೂರಿನ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ 6-8 ಲಕ್ಷ ರೂಪಾಯಿ ಲಂಚ ಪಡೆದಿರುವ ಆರೋಪ ಕೇಳಿಬಂದಿದ್ದು, ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಡಿಕೊಳ್ಳುವುದಾಗಿ ಕೃಷಿ ಅಧಿಕಾರಿಗಳು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನಾಗಮಂಗಲ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ ಸೇರಿದಂತೆ 7 ಜನ ಕೃಷಿ ಅಧಿಕಾರಿಗಳು ಕೃಷಿ ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.