ಬೆಂಗಳೂರು: ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢಪಟ್ಟಿದೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ 5 ವರ್ಷದ ಬಾಲಕಿಗೆ ಝೀಕಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕಳೆದ 15 ದಿನಗಳಿಂದ ಜ್ವರ, ವಾಂತಿ, ಭೇದಿಯಿಂದ ಬಳಲುತ್ತಿರುವ ಬಾಲಕಿಯನ್ನು ಮೊದಲು ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಳಿಕ ಡೆಂಘಿ ಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ವಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಸ್ಯಾಂಪಲ್ ಸಂಗ್ರಹಿಸಿ ಪುಣೆಯ ವೈರಾಲಜಿ ಲ್ಯಾಬ್ ಗೆ ಕಳುಹಿಸಿದ್ದು, ಅಲ್ಲಿಂದ ಬಂದ ಸ್ಯಾಂಪಲ್ ರಿಪೋರ್ಟ್ ಝೀಕಾ ಪಾಸಿಟಿವ್ ರಿಪೋರ್ಟ್ ಬಂದಿದೆ. ನಂತರ ಬಾಲಕಿ ಕುಟುಂಬದವರ ರಕ್ತ, ಯೂರಿನ್ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.
ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿ, ರಾಯಚೂರು ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಗೆ ಝೀಕಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪುಣೆಯ ವೈರಾಲಜಿ ಲ್ಯಾಬ್ ನಿಂದ ಪಾಸಿಟಿವ್ ರಿಪೋರ್ಟ್ ಬಂದಿದೆ. ರಾಯಚೂರು ಬಾಲಕಿಯ ಮೇಲೆ ತೀವ್ರ ನಿಗಾವಹಿಸಲಾಗಿದ್ದು, ರಾಯಚೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಎಂದರು.
ಝೀಕಾ ವೈರಸ್ ಸೋಂಕಿನ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಝೀಕಾ ವೈರಸ್ ಸೋಂಕಿನ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು. ಆರೋಗ್ಯ ಇಲಾಖೆಯಿಂದ ಸಂಜೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.