ಶಿವಮೊಗ್ಗ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರು, ಇಲಾಖಾಧಿಕಾರಿಗಳನ್ನು ಸಂಪರ್ಕಿಸುವಂತೆ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದ್ದಾರೆ.
ಶಿಕಾರಿಪುರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರು, ಬರಗಾಲ ಮತ್ತು ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದ್ದು, ಸೌಲಭ್ಯ ದೊರೆಯದಿರುವ ಫಲಾನುಭವಿಗಳು ಸೌಲಭ್ಯಕ್ಕಾಗಿ ಸಂಬಂಧಿಸಿದ ಇಲಾಖಾಧಿಕಾರಿಗಳನ್ನು ಕೂಡಲೇ ಸಂಪರ್ಕಿಸುವುದು. ಈವರೆಗೆ ಅರ್ಜಿ ಸಲ್ಲಿಸದಿರುವ ಫಲಾನುಭವಿಗಳು ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ತುರ್ತು ಸಂದರ್ಭಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕಂಡುಬರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಹಾಗೂ ಜನಸಾಮಾನ್ಯರಿಗೆ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದಕ್ಕಾಗಿ ಅಗತ್ಯವಿರುವ ಅನುದಾನವನ್ನು ಕಾಯ್ದಿರಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಅರಣ್ಯದಲ್ಲಿ ಹಲವು ದಶಕಗಳಿಂದ ವಾಸವಾಗಿ ಬದುಕು ರೂಪಿಸಿಕೊಂಡಿರುವ ವನವಾಸಿಗಳನ್ನು ಒಕ್ಕಲೆಬ್ಬಿಸದಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ ಅವರು ಹೊಸದಾಗಿ ಅರಣ್ಯ ಒತ್ತುವರಿ ಮಾಡದಂತೆ ಕ್ರಮ ಕೈಗೊಳ್ಳಬೇಕು. ವನವಾಸಿಗಳ ಅನುಕೂಲಕ್ಕಾಗಿ ಸರ್ಕಾರ ಸದ್ಯದಲ್ಲಿ ಜನಸ್ನೇಹಿ ನಿರ್ಣಯ ಕೈಗೊಳ್ಳಲಿದೆ ಎಂದರು.