ರಾಜಸ್ಥಾನದ ದೌಸಾ ಜಿಲ್ಲೆಯ ಲಾಲ್ಸೋಟ್ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
ಆರೋಪಿ ಸಬ್ ಇನ್ಸ್ ಪೆಕ್ಟರ್ ಭೂಪೇಂದ್ರ ಸಿಂಗ್ ಎಂಬಾತ ಅಂದಾಜು 7 ವರ್ಷದ ಬಾಲಕಿಗೆ ಆಮಿಷವೊಡ್ಡಿ ಹೇಯ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.
ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ(ಎಎಸ್‌ಪಿ) ರಾಮಚಂದ್ರ ಸಿಂಗ್ ನೆಹ್ರಾ ಅವರು, ಆರೋಪಿಯು ಪ್ರಸ್ತುತ ಬಂಧನದಲ್ಲಿದ್ದು ವಿಚಾರಣೆಗೆ ಒಳಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿಯ ನಿಖರವಾದ ವಯಸ್ಸನ್ನು ವೈದ್ಯಕೀಯ ಪರೀಕ್ಷೆಯ ನಂತರ ಮತ್ತು ಸಂತ್ರಸ್ತೆಯ ಕುಟುಂಬ ಸದಸ್ಯರ ವರದಿಯ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ ಎಂದು ದೌಸಾ ಪೊಲೀಸ್ ವರಿಷ್ಠಾಧಿಕಾರಿ(ಎಎಸ್ಪಿ) ವಂದಿತಾ ರಾಣಾ ಅವರು ಹೇಳಿದ್ದಾರೆ.
ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸ್ಥಳೀಯ ನಿವಾಸಿಗಳು ರಾಹುವಾಸ್ ಪೊಲೀಸ್ ಠಾಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಸಮುದಾಯದವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ, ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಕೂಡ ಸ್ಥಳಕ್ಕೆ ಭೇಟಿ ನೀಡಿ, ಘಟನೆಯನ್ನು ಖಂಡಿಸಿದರು ಮತ್ತು ಸಂತ್ರಸ್ತ ಬಾಲಕಿಗೆ ನ್ಯಾಯಕ್ಕಾಗಿ ಒತ್ತಾಯಿಸಿದರು.
ಘಟನೆಯನ್ನು ತೀವ್ರವಾಗಿ ಖಂಡಿಸಿರುವ ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಸಿ.ಪಿ.ಜೋಶಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಹೇಳಿದ್ದಾರೆ.