ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ.
ಸೋಮವಾರ ಮಂಗಳೂರಿನ ಕಾವೂರಿನಲ್ಲಿ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಸಕ ಭರತ್ ಶೆಟ್ಟಿ, ಹಿಂದೂ ಧರ್ಮದ ವಿರುದ್ಧ ಮಾತನಾಡಿರುವ ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆಯೇ ಕೆನ್ನೆಗೆ ಬಾರಿಸಬೇಕಿತ್ತು. ಅಲ್ಲದೆ ಶಿವನ ಫೋಟೋ ಹಿಡಿದು ನಿಂತಿದ್ದ ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಆತ ಸುಟ್ಟು ಬೂದಿಯಾಗುತ್ತಾನೆ ಎಂದೇ ಗೊತ್ತಿಲ್ಲವೆಂದು ಹರಿಹಾಯ್ದಿದ್ದರು.
ಈ ಹಿನ್ನೆಲೆಯಲ್ಲಿ ಭರತ್ ಶೆಟ್ಟಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ಥಳೀಯ ಕಾರ್ಪೊರೇಟರ್ ಅನಿಲ್ ಕುಮಾರ್ ಎಂಬವರು ದೂರು ನೀಡಿದ್ದರು.ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶಾಸಕ ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.