ಶಿವಮೊಗ್ಗ: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರುವಾಗಿದ್ದು, ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ. ಬಿಜೆಪಿಯಿಂದ ಯಾವುದೇ ಕಾರಣಕ್ಕೂ ಆಪರೇಷನ್ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಶಾಸಕರಿಗೆ 100 ಕೋಟಿ ಆಫರ್ ನೀಡಿದ ಬಗ್ಗೆ ಶಾಸಕ ರವಿಕುಮಾರ್ ಗಣಿಗ ಏನು ಹೇಳಿದ್ದಾರೆ ಎನ್ನುವುದಕ್ಕಿಂತ ಜವಾಬ್ದಾರಿ ಸ್ಥಾನದಲ್ಲಿರುವ ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಹೇಳಿದ್ದಾರೆ ಎಂದರು.
ಶಾಸಕರನ್ನು ಖರೀದಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿಯವರೇ ಹೇಳಿದ್ದಾರೆ. ನಾನು ಅವತ್ತು ಕೂಡ ಹೇಳಿದ್ದೇನೆ. ಬಿಜೆಪಿ ಆಪರೇಷನ್ ಮಾಡುತ್ತಿಲ್ಲ. ಕಾಂಗ್ರೆಸ್ ನಲ್ಲಿ ಅಸಮಾಧಾನ ಕುದಿಯುತ್ತಿದೆ. ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಶಾಸಕರಿಗೆ ಅನುದಾನ ನೀಡುತ್ತಿಲ್ಲ. ಸಿಎಂ ಆಗಬೇಕೆಂದು ಕಾಂಗ್ರೆಸ್ ನಲ್ಲಿಯೇ ಪೈಪೋಟಿ ಶುರುವಾಗಿದೆ. ಈ ಪೈಪೋಟಿ ಪರಿಣಾಮವಾಗಿ ಕುದುರೆ ವ್ಯಾಪಾರ ನಡೆಯುತ್ತಿದೆ. ರಾಜ್ಯದ ಜನರು ಬಿಜೆಪಿಯನ್ನು ವಿಪಕ್ಷ ಸ್ಥಾನದಲ್ಲಿ ಕೂರಿಸಿದ್ದಾರೆ. ವಿರೋಧ ಪಕ್ಷವಾಗಿ ನಾವು ಯಶಸ್ವಿಯಾಗಿ ಕೆಲಸ ಮಾಡುತಿದ್ದೇವೆ ಎಂದು ಹೇಳಿದ್ದಾರೆ.
ಐವತ್ತು ಕೋಟಿ ರೂಪಾಯಿ ಕೊಡುತ್ತಾರೋ, 100 ಕೋಟಿ ರೂಪಾಯಿ ಕೊಡುತ್ತಾರೋ. ಆ ಪಕ್ಷದಲ್ಲಿರುವ ಘಟಾನುಘಟಿಗಳಿಗೆ ಬಿಟ್ಟ ವಿಚಾರ. ಬಿಜೆಪಿಗೂ ಈ ವಿಚಾರಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ದಿನಗಳು ಹತ್ತಿರವಾಗಿವೆ. ರಾಜೀನಾಮೆ ಕೊಡುವ ದಿನ ಹತ್ತಿರವಾದ ಹಿನ್ನೆಲೆಯಲ್ಲಿ ಕುದುರೆ ವ್ಯಾಪಾರ ಶುರುವಾಗಿದೆ. ಮುಖ್ಯಮಂತ್ರಿ, ಸರ್ಕಾರದ ಹಣೆಬರಹ ರಾಜ್ಯದ ಜನರಿಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ.
ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿಯೂ ಎನ್.ಡಿ.ಎ. ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲುತ್ತಾರೆ. ಸಂಡೂರು ಮತ್ತು ಶಿಗ್ಗಾವಿಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ಭವಿಷ್ಯ ಹೇಳುತ್ತಿಲ್ಲ, ಪ್ರವಾಸ ಮಾಡಿ ಆ ಕ್ಷೇತ್ರಗಳ ಜನರ ಭಾವನೆ ಅರ್ಥ ಮಾಡಿಕೊಂಡು ಹೇಳುತ್ತಿದ್ದೇನೆ. ಮೂರು ಕ್ಷೇತ್ರಗಳಲ್ಲಿ ವಿಜಯಶಾಲಿ ಆಗುತ್ತೇವೆ ಎಂದು ಹೇಳಿದ್ದಾರೆ.