![](https://kannadadunia.com/wp-content/uploads/2022/01/WhatsApp-Image-2022-01-06-at-4.09.18-PM.jpeg)
ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಾವೆಲ್ಲರೂ ಒಗ್ಗೂಡಿ ಪ್ರಯತ್ನಿಸಬೇಕಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಮನವಿಯಂತೆ ಸುಮಾರು 73 ಅತಿ ಹಿಂದುಳಿದ ಜಾತಿಗಳನ್ನು ಗುರುತಿಸಿ ಒಬಿಸಿ ಪಟ್ಟಿಯಲ್ಲಿ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ ಎಂದಿದ್ದಾರೆ.
ಬಲಾಢ್ಯ ಸಮುದಾಯಗಳೂ ಸಹ ಆರ್ಥಿಕವಾಗಿ ಹಿಂದುಳಿದಿರುವುದಾಗಿ ಅಹವಾಲನ್ನು ಕೊಡುತ್ತವೆ, ಆದರೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದಿದ್ದಾರೆ.
ಅತಿ ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ವಿಚಾರವಾಗಿ ಯಾರಿಗೂ ಅನ್ಯಾಯವಾಗದಂತೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಮೀಸಲಾತಿ ವಿಚಾರದಲ್ಲಿ ಮುಂದಿನ 15 ದಿನಗಳಲ್ಲಿ ಸಭೆ ಕರೆದು ಚರ್ಚೆ ಮಾಡುತ್ತೇವೆ ಎಂದು ಸಚಿವರು ಭರವಸೆ ನೀಡಿದ್ದಾರೆ.
ಸಭೆಗೂ ಮುನ್ನ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ 2 ನೇ ಕಾರ್ಯಕಾರಿ ಮಂಡಳಿ ಸಭೆ ನಡೆಯಿತು. ಇತ್ತೀಚೆಗೆ ನಿಧನರಾದ ಹಿರಿಯ ಮುತ್ಸದ್ದಿ ರಾಜಕಾರಣಿ, ಮಾಜಿ ರಾಜ್ಯ ಮತ್ತು ಕೇಂದ್ರ ಸಚಿವ, ಹಿಂದುಳಿದ ಸಮುದಾಯಗಳ ನಾಯಕ ಆರ್.ಎಲ್. ಜಾಲಪ್ಪನವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.