ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತುಮಕೂರು ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೇಮಾವತಿ ನದಿ ನೀರು ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ತುಮಕುರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಲಿಂಕ್ ಕೆನಾಲ್ ಯೋಜನೆ ಹೋರಾಟ ಸಮಿತಿ ವಾರದ ಹಿಂದೆಯೇ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿತ್ತು.
ಇದೀಗ ಪ್ರತಿಭಟನೆಗೆ ವಿಪಕ್ಷ ನಾಯಕರು ಸಾಥ್ ನೀಡಿದ್ದು, ತುಮಕೂರು ನಗರ, ಗುಬ್ಬಿ ಕ್ರಾಸ್ ನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಗೃಹ ಸಚಿವ ಪರಮೇಶ್ವರ್ ನಿವಾಸಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.