ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರಾಗಬಹುದು ಎಂಬ ಕುತೂಹಲ ಎಲ್ಲರಲ್ಲಿಯೂ ಮನೆ ಮಾಡಿದೆ. ವಿಧಾನಸಭಾ ಚುನಾವಣೆಯಲ್ಲಿ ತಂದೆಗಾಗಿ ವರುಣಾ ಕ್ಷೇತ್ರವನ್ನೇ ತ್ಯಾಗ ಮಾಡಿರುವ ಯತೀಂದ್ರ ಸಿದ್ದರಾಮಯ್ಯ, ಈಬಾರಿ ಲೋಕಸಭಾ ಚುನಾವಣಾ ಅಖಾಡಕ್ಕಿಳಿಯುವ ಸಾಧ್ಯತೆ ದಟ್ಟವಾಗಿದ್ದು, ಮೈಸೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಬಹುದು ಎಂಬ ಸುದ್ದಿ ಹರಿದಾಡುತ್ತಿರುವಾಗಲೇ ಶಾಸಕ ಪ್ರದೀಪ್ ಈಶ್ವರ್ ಅಭ್ಯರ್ಥಿಯ ಹೆಸರು ಬಹಿರಂಗ ಪಡಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಪ್ರತಾಪ ಸಿಂಹ ಅವರಂತಹ ಮುಠ್ಠಾಳ ಮತ್ತೊಬ್ಬರಿಲ್ಲ. ಯಾವಾಗಲೂ ಸಿದ್ದರಾಮಯ್ಯ ವಿರುದ್ಧ ಮಾತನಾಡುತ್ತಲೇ ಇರುತ್ತಾರೆ. ಹೀಗಾದರೆ ಪರಿಣಾಮ ನೆಟ್ಟಗಿರಲ್ಲ ಎಂದು ಗುಡುಗಿದ್ದಾರೆ.
ಸಂಸತ್ ಭವನದಲ್ಲಿ ಸ್ಮೋಕ್ ಬಾಂಬ್ ಹಾಕಿದವರಿಗೆ ಪಾಸ್ ನೀಡಿರುವ ಪ್ರತಾಪ್ ಸಿಂಹ ದೇಶ ದ್ರೋಹಿ ಅಲ್ವಾ? ಅವರು ಈ ಬಾರಿ ಚುನಾವಣೆ ಗೆಲ್ಲವುದಿಲ್ಲ. ಈ ಬಾರಿ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವುದು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಎಂದು ಹೇಳಿದ್ದಾರೆ. ಈ ಮೂಲಕ ಪ್ರದೀಪ್ ಈಶ್ವರ್ ಯತೀಂದ್ರ ಸಿದ್ದರಾಮಯ್ಯ ಮೈಸೂರು ಲೋಕಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುಳಿವು ನೀಡಿದ್ದಾರೆ.