ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿರುವ ಸಿ.ಎಂ. ಇಬ್ರಾಹಿಂ ಈಗ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದಾರೆ. ತಮಗೆ ವಿಧಾನಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನ ಸಿಗಲಿಲ್ಲವೆಂಬ ಕಾರಣಕ್ಕೆ ಅಸಮಾಧಾನಗೊಂಡು ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ತೊರೆದಿದ್ದರು.
ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರ್ಪಡೆಯಿಂದ ಅಲ್ಪಸಂಖ್ಯಾತ ಮತಗಳನ್ನು ಗಳಿಸಲು ಸಹಾಯಕವಾಗುತ್ತದೆ ಎಂಬ ಕಾರಣಕ್ಕಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದರು.
ಇದೀಗ ಸಿ.ಎಂ. ಇಬ್ರಾಹಿಂ, ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ತಮ್ಮನ್ನು ಅಭ್ಯರ್ಥಿಯನ್ನಾಗಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಸಂಖ್ಯಾಬಲದ ಆಧಾರದ ಮೇಲೆ ಜೆಡಿಎಸ್ ವಿಧಾನ ಪರಿಷತ್ ನ ಒಂದು ಸ್ಥಾನ ಗೆಲ್ಲಬಹುದಾಗಿದ್ದು, ಇದಕ್ಕೆ ಪಕ್ಷದ ರಾಜ್ಯಾಧ್ಯಕ್ಷರೇ ಬೇಡಿಕೆ ಇಟ್ಟಿರುವುದು ಜೆಡಿಎಸ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎನ್ನಲಾಗಿದೆ.
ಈಗಾಗಲೇ ಸಿಎಂ ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು, ಇದೀಗ ಅವರನ್ನು ಮತ್ತೆ ವಿಧಾನ ಪರಿಷತ್ ಅಭ್ಯರ್ಥಿಯನ್ನಾಗಿಸಿದರೆ ಇತರೆ ಆಕಾಂಕ್ಷಿಗಳ ಅಸಮಾಧಾನಕ್ಕೆ ಕಾರಣವಾಗಬಹುದೆಂಬ ಆತಂಕವೂ ಜೆಡಿಎಸ್ ನಾಯಕರನ್ನು ಕಾಡುತ್ತಿದೆ ಎಂದು ಹೇಳಲಾಗಿದೆ.