
ಚಿಕ್ಕಮಗಳೂರು: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳಿಂದ ನಡೆದ 2021ರ ವಿಧಾನ ಪರಿಷತ್ ಚುನಾವಣೆ ಮರು ಮತ ಎಣಿಕೆ ಇಂದು ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಇಂದು ಚಿಕ್ಕಮಗಳೂರು ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಶಾಂತಿ ಕಾಪಾಡುವ ದೃಷ್ಟಿಗಿಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತ ಎಣಿಕೆ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಚಿಕ್ಕಮಗಳೂರಿನ ಕೆಎಂ ರಸ್ತೆಯಲ್ಲಿರುವ ಐಡಿಎಸ್‌ಜಿ ಕಾಲೇಜಿನಲ್ಲಿ ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ. ಚುನಾವಣಾ ಆಯೋಗದಿಂದ ಮೂವರು ವೀಕ್ಷಕರ ನೇಮಕ ಮಾಡಲಾಗಿದೆ. ಎರಡು ಟೇಬಲ್ ಗಳಲ್ಲಿ ಮರು ಮತ ಎಣಿಕೆ ವಿಡಿಯೋ ಚಿತ್ರೀಕರಣ ಮಾಡಲಾಗುವುದು. ನಂತರ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಗೆ ಅಧಿಕಾರಿಗಳು ವರದಿ ಸಲ್ಲಿಸಲಿದ್ದಾರೆ.
ಮತ ಎಣಿಕೆ ಕೇಂದ್ರಕ್ಕೆ ಅಭ್ಯರ್ಥಿಗಳು ಸೇರಿದಂತೆ ಮೂವರಿಗೆ ಅವಕಾಶ ನೀಡಲಾಗಿದೆ. ಮರು ಮತ ಎಣಿಕೆಗೆ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇ ಗೌಡ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಗಾಯತ್ರಿ ಅವರ ವಿರುದ್ಧ ಎಂ.ಕೆ. ಪ್ರಾಣೇಶ್ 6 ಮತಗಳ ಅಂತರದಿಂದ ಜಯಗಳಿಸಿದ್ದರು. ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಸೂಚನೆಯಂತೆ ಮರುಮತ ಎಣಿಕೆ ಕೈಗೊಳ್ಳಲಾಗಿದೆ ಎಂದು ಚಿಕ್ಕಮಂಗಳೂರು ಡಿಸಿ ಮೀನಾ ನಾಗರಾಜ್ ಮಾಹಿತಿ ನೀಡಿದ್ದಾರೆ.