ಬೆಂಗಳೂರು: ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಆರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಒಟ್ಟು 103 ಅಭ್ಯರ್ಥಿಗಳಿಂದ 156 ನಾಮಪತ್ರ ಸಲ್ಲಿಕೆಯಾಗಿವೆ.
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ. ರಘುಪತಿ ಭಟ್, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕೋಟೆ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ.
ಇದುವರೆಗೆ ಒಟ್ಟು 103 ಅಭ್ಯರ್ಥಿಗಳಿಂದ 156 ನಾಮಪತ್ರ ಸಲ್ಲಿಕೆಯಾಗಿದ್ದು, ಬಿಜೆಪಿ 5, ಕಾಂಗ್ರೆಸ್ 6, ಜೆಡಿಎಸ್ 2, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 7, ಪಕ್ಷೇತರರಿಂದ 83 ನಾಮಪತ್ರಗಳು ಸಲ್ಲಿಕೆಯಾಗಿದೆ. ಶುಕ್ರವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 20 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್ 3ರಂದು ಮತದಾನ ನಡೆಯಲಿದೆ. ಜೂನ್ 6 ರಂದು ಫಲಿತಾಂಶ ಪ್ರಕಟವಾಗಲಿದೆ.