ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದ್ದು, ಜ್ಯೋತಿರಾಧಿತ್ಯ ಸಿಂಧಿಯಾ ಮತ್ತು ಸರ್ಬಾನಂದ ಸೋನೋವಾಲ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಮಧ್ಯಪ್ರದೇಶದ ಪ್ರಭಾವಿ ಯುವ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ, ಅಸ್ಸಾಂ ಮಾಜಿ ಸಿಎಂ ಸರ್ಬಾನಂದ ಸೋನೋವಾಲ್, ಬಿಹಾರ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಅವರು ಮೋದಿ ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಹೇಳಲಾಗಿದೆ.
ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ ಕುರಿತಾಗಿ ಸಮಾಲೋಚನೆ ನಡೆಸಿದ್ದು, ಸಂಭವನೀಯ ಸಚಿವರ ಪಟ್ಟಿ ಬಹುತೇಕ ಅಂತಿಮಗೊಳಿಸಲಾಗಿದೆ.
ಕೇಂದ್ರ ಸರ್ಕಾರದ ಪಾಲುದಾರ ಪಕ್ಷಗಳಿಗೂ ಸಂಪುಟದಲ್ಲಿ ಅವಕಾಶ ಮಾಡಿಕೊಡುವ ಸಾಧ್ಯತೆ ಇದೆ. ಸರ್ಕಾರದಿಂದ ಶಿವಸೇನೆ ಮತ್ತು ಶಿರೋಮಣಿ ಅಕಾಲಿದಳ ಹೊರ ನಡೆದಿದ್ದು, ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್, ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾದ ಸ್ಥಾನಗಳು ಖಾಲಿ ಉಳಿದಿವೆ. ಹೀಗೆ ಖಾಲಿ ಉಳಿದ ಸ್ಥಾನಗಳನ್ನು ಭರ್ತಿ ಮಾಡಲು ಚಿಂತನೆ ನಡೆಸಲಾಗಿದೆ.
ಕರ್ನಾಟಕದಿಂದ ಒಬ್ಬರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸುರೇಶ್ ಅಂಗಡಿ ಅವರಿಂದ ತೆರವಾದ ಸ್ಥಾನಕ್ಕೆ ರಾಜ್ಯದವರನ್ನೇ ಆಯ್ಕೆ ಮಾಡುವ ನಿರೀಕ್ಷೆ ಇದೆ.