ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಓರ್ವ ಬಲಿಯಾಗಿರುವ ಬೆನ್ನಲ್ಲೇ ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಿದೆ.
ಚಿಕ್ಕಮಗಳೂರಿನಲ್ಲಿ ಮೂವರಲ್ಲಿ ಮಂಗನ ಕಾಯಿಲೆ (KFD) ಸೋಂಕು ಪತ್ತೆಯಾಗಿತ್ತು. ಮೂವರಲ್ಲಿ ಓರ್ವ ವೃದ್ಧ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಚಿಕ್ಕಮಗಳೂರಿನಲ್ಲಿ ಅಲರ್ಟ್ ಘೋಷಿಸಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಕೆ ಎಫ್ ಡಿ ವಾರ್ಡ್ ತೆರೆಯಲಾಗಿದೆ
ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಒಬ್ಬರು, ಕೊಪ್ಪ ತಾಲೂಕಿನಲ್ಲಿ ಇಬ್ಬರಲ್ಲಿ ಸೋಂಕು ಪತ್ತೆಯಾಗಿತ್ತು. ಶೃಂಗೇರಿ ಮೂಲದ ವೃದ್ಧ ನಿನ್ನೆ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಮೃತ ವೃದ್ಧನ ಗ್ರಾಮ ಶೃಂಗೇರಿಯ ಬೇಗನೆ ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಶೃಂಗೇರಿ, ಕೊಪ್ಪ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮನೆ ಮನೆಗೆ ತೆರಳಿ ಔಷಧಿ ನೀಡುತ್ತಿದ್ದಾರೆ. ಅರಣ್ಯದಲ್ಲಿ ಕೆ ಎಫ್ ಡಿ ಸೋಂಕು ಹರಡದಂತೆ ಔಷಧಿ ಸಿಂಪಡಣೆ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಮೃತಪಟ್ಟ ಮಂಗನ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.