ಬೆಂಗಳೂರು: ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮುಂಗಾರು ಪೂರ್ವ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸುತ್ತಿವೆ. ಈ ನಡುವೆ ಮುಂಗಾರು ಮಳೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು ಮಳೆ ಆಗಮನವಾಗಲಿದೆ. ನೈಋತ್ಯ ಮುಂಗಾರು ಮಳೆ ಕೇರಳದ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಈ ಬಾರಿ ಉತ್ತಮ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ. ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನ ಮುಂದೆ ಹೋಗಬಹುದು. ನೈಋತ್ಯ ಮುಂಗಾರು ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ರಂದು ಮುಂಗಾರು ಕೇರಳ ಕರಾವಳಿ ಪ್ರವೇಶಿಸಲಿದ್ದು, ಕರ್ನಾಟಕಕ್ಕೂ ಎಂಟ್ರಿಯಾಗುವ ನಿರೀಕ್ಷೆ ಇದೆ.
ಇನ್ನು ಜೂನ್ 1ರಿಂದ ಅಥವಾ 2ರಿಂದ ರಾಜ್ಯದಲ್ಲಿ ಮುಂಗಾರು ಮಳೆಯಾಗಲಿದ್ದು, ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.