ಬೆಂಗಳೂರು: ತಿಂಗಳಾಂತ್ಯಕ್ಕೆ ಕೇರಳಕ್ಕೆ ಆಗಮಿಸಲಿರುವ ಮುಂಗಾರು ಜೂನ್ ಮೊದಲ ವಾರ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 31 ರಂದು ಕೇರಳಕ್ಕೆ ಮಾನ್ಸೂನ್ ಆಗಮಿಸಲಿದೆ. ನಂತರ ರಾಜ್ಯಕ್ಕೆ ಪ್ರವೇಶಿಸಲು ಒಂದು ವಾರ ಬೇಕು. ಸಾಮಾನ್ಯವಾಗಿ ಜೂನ್ 5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶವಾಗುತ್ತದೆ. ಈ ವರ್ಷ ಕೂಡ ಒಂದೆರಡು ದಿನ ಹೆಚ್ಚು ಕಡಿಮೆ ಇದೆ ಅವಧಿಯಲ್ಲಿ ಮುಂಗಾರು ಶುರುವಾಗಲಿದೆ ಎಂದು ಹೇಳಲಾಗಿದೆ.
ಜೂನ್ 1ರಿಂದ 3ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಮೈಸೂರು, ಮಂಡ್ಯ, ಕೊಡಗು, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 28ರಿಂದ 31ರವರೆಗೆ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ.
ನೈರುತ್ಯ ಮುಂಗಾರು ಬಗ್ಗೆ ಭಾರತೀಯ ಹವಾಮಾನ ಇಲಾಖೆ ಸೋಮವಾರ ಅಂತಿಮ ವರದಿ ಬಿಡುಗಡೆ ಮಾಡಿದ್ದು, ಜೂನ್ ನಿಂದ ಸೆಪ್ಟೆಂಬರ್ ವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ವಾಡಿಕೆಗಿಂತ ಸ್ವಲ್ಪ ಹೆಚ್ಚು ಮಳೆ ಆಗಲಿದೆ ಎಂದು ತಿಳಿಸಿದೆ.