ಬೆಂಗಳೂರು: ಗುರುವಾರ ಕೇರಳ ಪ್ರವೇಶಿಸಿದ್ದ ಮುಂಗಾರು ಮಾರುತಗಳು ಮರುದಿನವೇ ರಾಜ್ಯದ ಕರಾವಳಿಗೆ ಎಂಟ್ರಿ ಕೊಟ್ಟಿವೆ. ಜುಲೈ 5 ರ ವೇಳೆಗೆ ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಬಹುದು ಎಂದು ಹೇಳಲಾಗಿತ್ತು. ಆದರೆ, ಒಂದು ದಿನ ಮೊದಲೇ ನೈಋತ್ಯ ಮುಂಗಾರು ಮಾರುತಗಳು ರಾಜ್ಯ ಪ್ರವೇಶಿಸಿದೆ.
ಗುರುವಾರ ರಾತ್ರಿಯಿಂದಲೇ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಜೂನ್ 6 ರವರೆಗೂ ಹೆಚ್ಚಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ.
ಅದೇ ರೀತಿ ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಚಿಕ್ಕಮಗಳೂರು, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಇಡೀ ರಾಜ್ಯಕ್ಕೆ ನೈರುತ್ಯ ಮುಂಗಾರು ವ್ಯಾಪಿಸಿ ವ್ಯಾಪಕ ಮಳೆಯಾಗಲಿದೆ ಎಂದು ಹೇಳಲಾಗಿದೆ.