ಮೊರಾಕ್ಕೊ: ಮೊರಾಕ್ಕೊದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈವರೆಗೆ 2000ಕ್ಕೂ ಹೆಚ್ಚು ಜನರು ಭೂಕಂಪಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಮೊರಾಕ್ಕೊದ ಮುರಕೇಶ್ ನೈಋತ್ಯ ಭಾಗದಲ್ಲಿ ಶುಕ್ರವಾರ ತಡ ರಾತ್ರಿ 6.8 ತೀವ್ರತೆಯ ಭೂಕಂಪ ಸಂಭವಿಸಿದ್ದು, 2000ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಭೂಕಂಪಕ್ಕೆ ಕಟ್ಟಡಗಳು ನೆಲಸಮವಾಗಿದ್ದು, ಕಟ್ಟಡಗಳ ಅವಶೇಷಗಳಡಿ ಹಲವರು ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಘಟನೆಯಲ್ಲಿ 2,059 ಜನರು ಗಾಯಗೊಂಡಿದ್ದಾರೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ದೇಶಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ.
ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ರಸ್ತೆ ಮಾರ್ಗಗಳನ್ನು ತೆರವುಗೊಳಿಸಲಾಗುತ್ತಿದೆ. ಟರ್ಕಿಯ ವಿಪತ್ತು ಮತ್ತು ತುರ್ತು ನಿರ್ವಹಣಾ ಇಲಾಖೆಯು ವೈದ್ಯಕೀಯ, ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ ಎಂದು ತಿಳಿದುಬಂದಿದೆ.