ಬೆಂಗಳೂರು : ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮೂಲಸೌಕರ್ಯವನ್ನು ಉನ್ನತೀಕರಿಸುವ ಒಪ್ಪಂದ ಪತ್ರಕ್ಕೆ ಸಹಿ ಹಾಕಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸಿಎಸ್ಆರ್ ಬಾಕ್ಸ್ (CSRBOX) ಸಂಸ್ಥೆಯ ಮೂಲಕ ವಿವಿಧ ಖಾಸಗಿ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಬಳಸಿ, ರಾಜ್ಯದ 200 ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ, ಅಂದಾಜು ₹100 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯವನ್ನು ಉನ್ನತೀಕರಿಸುವ ಒಪ್ಪಂದ ಪತ್ರಕ್ಕೆ ಇಂದು ಸಹಿ ಹಾಕಲಾಯಿತು ಎಂದು ಅವರು ಹೇಳಿದರು.
ಖಾಸಗಿ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಸಮಪರ್ಕವಾಗಿ ಬಳಸಿಕೊಂಡು ರಾಜ್ಯದಲ್ಲಿನ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಖಾಸಗಿ ಕಂಪನಿಗಳ ಜೊತೆ ಸಂವಹನ ಸಾಧಿಸಲು ಇಲಾಖೆಯ ಉಪ ನಿರ್ದೇಶಕರನ್ನು ರಾಜ್ಯಮಟ್ಟದ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ಅವರು ಹೇಳಿದರು.
ಖಾಸಗಿ ಸಂಸ್ಥೆಗಳು ನಮ್ಮ ಇಲಾಖೆಯ ಜೊತೆ ಕೈ ಜೋಡಿಸುವುದರಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನ ಸಾಮಾನ್ಯರಿಗೆ ಗುಣಮಟ್ಟದ ಚಿಕಿತ್ಸೆ ದೊರೆಯಲಿದೆ. ಹಾಗೂ ನಮ್ಮ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು ಸಹಾಯಕಾರಿಯಾಗಲಿದೆ ಎಂದರು.