ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ.
ರಾಘವೇಂದ್ರ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಎಫ್ಐಆರ್ ಗೆ ತಡೆ ನೀಡಿ ಆದೇಶಿಸಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ಪೋಲೀಸರು ಮತ್ತು ಪ್ರಕರಣದ ದೂರುದಾರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾರಿ ವಿಚಕ್ಷಣ ದಳ ಅಧಿಕಾರಿ ಪಿ. ಅವಿನಾಶ್ ಅವರಿಗೆ ಪ್ರಕರಣ ಸಂಬಂಧ ಅಕ್ಷೇಪಣೆ ಸಲ್ಲಿಸಲು ನೋಟಿಸ್ ಜಾರಿಗೊಳಿಸಲಾಗಿದೆ.
ಕಳೆದ ಮಾರ್ಚ್ 23 ರಂದು ಬೆಳಿಗ್ಗೆ ಚಿತ್ರದುರ್ಗದ ಸಿದ್ದೇಶ್ವರ ಭೋವಿ ಸಮಾಜದ ಗುರುಪೀಠದಲ್ಲಿ ಸಭೆ ನಡೆಸಿ ಮತದಾರರ ಮೇಲೆ ಪ್ರಭಾವ ಬೀರಲು ಭಾಷಣ ಮಾಡಿ ಧಾರ್ಮಿಕ ಸ್ಥಳ ದುರುಪಯೋಗ ಮಾಡಿಕೊಂಡಿದ್ದಾರೆ. ಸಭೆ ನಡೆಸಲು ಚುನಾವಣಾ ಆಯೋಗದಿಂದ ಅನುಮತಿ ಪಡೆದಿಲ್ಲ. ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಪಿ. ಅವಿನಾಶ್ ದೂರು ನೀಡಿದ್ದರು. ಇದನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.
ಇದನ್ನು ಪ್ರಶ್ನಿಸಿ ಸಮಸದ ರಾಘವೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದು, ತಾವು ಎಸಗಿದ ಅಪರಾಧಗಳ ಬಗ್ಗೆ ಮಾಹಿತಿ ಇಲ್ಲ. ಕ್ರಿಮಿನಲ್ ಪ್ರಕ್ರಿಯೆ ಮುಂದುವರೆಸಿದರೆ ಕಾನೂನಿನ ದುರ್ಬಳಕೆಯಾಗುತ್ತದೆ. ತಮ್ಮ ವಿರುದ್ಧ ಎಫ್ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ಪ್ರಕ್ರಿಯೆ ರದ್ದುಪಡಿಸಬೇಕು ಅರ್ಜಿ ಇತ್ಯರ್ಥವಾಗುವವರೆಗೆ ಮಧ್ಯಂತರ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು.