ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಈವರೆಗೂ ಚರ್ಚೆ ಆಗಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ನನ್ನ ಹೆಸರು ಕೇಳಿ ಬಂದಿತ್ತು. ಈ ಬಾರಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಕೇಳಿ ಬರುತ್ತಿದೆ. ಆದರೆ, ಎಲ್ಲಿಯೂ ಸ್ಪರ್ಧಿಸಬೇಕೆಂಬ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಹೇಳಿದರೆ ಅಧಿಕೃತವಾಗುತ್ತದೆ. ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರು, ಎಲ್ಲ ಜಿಲ್ಲೆಗಳ ಅಧ್ಯಕ್ಷರು, ಪ್ರಮುಖ ನಾಯಕರೊಂದಿಗೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ,