ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿ ಗೆದರಿವೆ. ಈ ನಡುವೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾಗಿದ್ದಾರೆ.
ಬಿಡದಿಯ ತೋಟದ ಮನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಸಂಸದ ಪ್ರತಾಪ್ ಸಿಂಹ ಭೇಟಿಯಾಗಿ, ಒಂದು ಗಂಟೆ ಕಾಲ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವಿಚಾರವಾಗಿ ಚರ್ಚೆ ನಡೆದಿದೆ ಎನ್ನಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಈ ನಿಟ್ಟಿನಲ್ಲಿ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ವಿಚಾರವಾಗಿ ಎರಡೂ ಪಕ್ಷಗಳ ನಾಯಕರ ನಡುವೆ ಚರ್ಚೆ ನಡೆದಿದೆ. ಅಲ್ಲದೇ ಸಂಸತ್ ಭದ್ರತಾಲೋಪ ಆರೋಪಿಗೆ ಪಾಸ್ ನೀಡಿದ್ದ ಆರೋಪ ಸಂಸದ ಪ್ರತಾಪ್ ಸಿಂಹ ಮೇಲಿದ್ದು, ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ ಈ ಬಾರಿ ಮೈಸೂರು-ಕೊಡಗು ಲೋಕಸಭಾ ಟಿಕೆಟ್ ಪ್ರತಾಪ್ ಸಿಂಹ ಕೈ ತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಡುವೆ ಮೈಸೂರು ಕ್ಷೇತ್ರದ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಈ ಬೆಳವಣಿಗೆ ನಡುವೆಯೇ ಇದೀಗ ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.