ಮೈಸೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮೈಸೂರಿನ ಗುಂಬಜ್ ಮಾದರಿಯ ಬಸ್ ನಿಲ್ದಾಣ ಚರ್ಚೆಗೆ ಇತಿಶ್ರೀ ಹಾಡಲಾಗಿದೆ. ಬಸ್ ನಿಲ್ದಾಣದ ಮೇಲಿದ್ದ ಎರಡು ಗುಂಬಜ್ ಗಳನ್ನು ತೆರವುಗೊಳಿಸಲಾಗಿದ್ದು, ಮಾತಿನಂತೆ ನಡೆದುಕೊಂಡಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
ಮಧ್ಯದಲ್ಲೊಂದು ದೊಡ್ಡ ಗುಂಬಜ್, ಅಕ್ಕಪಕ್ಕ ಎರಡು ಚಿಕ್ಕ ಗುಂಬಜ್ ಇದ್ದರೆ ಅದು ಮಸೀದಿನೇ, ಅದನ್ನು ತೆರವು ಮಾಡಿಸುತ್ತೇನೆ ಎಂದಿದ್ದೆ ಮತ್ತು ಅದರಂತೆ ನಡೆದುಕೊಂಡಿದ್ದೇನೆ. ಕಾಲಾವಕಾಶ ಕೇಳಿ ಮಾತಿನಂತೆ ನಡೆದುಕೊಂಡ ಜಿಲ್ಲಾಧಿಕಾರಿಗಳಿಗೆ ಹಾಗೂ ವಾಸ್ತವ ಅರಿತು ಜನಾಭಿಪ್ರಾಯಕ್ಕೆ ತಲೆಬಾಗಿದ ಶಾಸಕ ರಾಮದಾಸ್ ಜಿ ಅವರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ.
ಮೈಸೂರಿನ ಊಟಿ ರಸ್ತೆಯಲ್ಲಿ ನಿರ್ಮಾಣಗೊಂಡಿದ್ದ ಬಸ್ ಶೆಲ್ಟರ್ ಮೇಲಿನ ಮೂರು ಗುಂಬಜ್ ಗಳು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಮಸೀದಿ ಮಾದರಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಶಾಸಕರ ಅನುಮತಿ ಮೇರೆಗೆ ಬಸ್ ನಿಲ್ದಾಣದ ಮೇಲಿದ್ದ ಮೂರು ಗುಂಬಜ್ ಗಳಲ್ಲಿ ಎರಡು ಗುಂಬಜ್ ಗಳನ್ನು ತೆರವುಗೊಳಿಸಲಾಗಿದೆ.