ಬೆಂಗಳೂರು: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಅಸಮಾಧಾನಗೊಂಡಿದ್ದು, ಇಂದು ತಮ್ಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ನವರು ನನ್ನನ್ನು ಸಂಪರ್ಕಿಸಿದ್ದಾರೆ. ಮಂಗಳವಾರ ನಿರ್ಧಾರ ಘೋಷಿಸುವೆ ಎಂದು ಸದಾನಂದ ಗೌಡ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಸದಾನಂದ ಗೌಡ ತಮ್ಮ ಮುಂದಿನ ನಿರ್ಧಾರ ಪ್ರಕಟಿಸಲಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಇಲ್ಲವೇ ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದಿಂದ ಸದಾನಂದ ಗೌಡ ಕಾಂಗ್ರೆಸ್ ಅಭ್ಯರ್ಥಿಯಾಗಬಹುದು ಎಂದು ಹೇಳಲಾಗಿದೆ. ಕಾಂಗ್ರೆಸ್ ಪಕ್ಷ ಸೇರದಿದ್ದರೆ ರಾಜಕೀಯ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ.
ಇನ್ನು ಕೊಪ್ಪಳ ಸಂಸದ ಸಂಗಣ್ಣ ಕರಡಿ ಟಿಕೆಟ್ ಕೈತಪ್ಪಿರುತ್ತೆ ಅಸಮಾಧಾನಗೊಂಡಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಪತ್ರಿಕಾಗೋಷ್ಠಿ ನಡೆಸಿ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸಲಿದ್ದಾರೆ.
ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದೇ ಅಸಮಾಧಾನಗೊಂಡಿರುವ ಸಂಗಣ್ಣ ಕರಡಿ ಯಾವ ನಾಯಕರೂ ತಮಗೆ ಕರೆ ಮಾಡಿಲ್ಲ ಎಂದು ಗುಡುಗಿದ್ದಾರೆ. ಕೊಪ್ಪಳದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಮುಂದಿನ ನಿರ್ಧಾರ ಪ್ರಕಟಿಸಲಿದ್ದಾರೆ. ಅವರ ಪತ್ರಿಕಾಗೋಷ್ಠಿ ಕುತೂಹಲ ಕೆರಳಿಸಿದೆ.