ಮಹತ್ವದ ಬೆಳವಣಿಗೆಯೊಂದರಲ್ಲಿ, ತಾವು ಲೋಕಸಭಾ ಚುನಾವಣೆಯಲ್ಲಿ ಸದ್ಯಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇವೆ ಎಂದು ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರು ಘೋಷಿಸಿದ್ದಾರೆ.
ಮಠದ ಭಕ್ತರ ಜೊತೆ ಚರ್ಚೆ ನಡೆಸಿದ ಬಳಿಕ ದಿಂಗಾಲೇಶ್ವರ ಸ್ವಾಮೀಜಿಯವರು ಈ ತೀರ್ಮಾನ ಕೈಗೊಂಡಿದ್ದು. ಒಂದೊಮ್ಮೆ ಕಾಂಗ್ರೆಸ್ ಟಿಕೆಟ್ ನೀಡಲು ಮುಂದೆ ಬಂದರೆ ಅಂತಹ ಸಂದರ್ಭದಲ್ಲಿ ಮತ್ತೊಮ್ಮೆ ಭಕ್ತರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದಿದ್ದಾರಲ್ಲದೆ ಏಪ್ರಿಲ್ 18ರಂದು ತಾವು ನಾಮಪತ್ರ ಸಲ್ಲಿಕೆ ಮಾಡುವುದಾಗಿ ಸ್ವಾಮೀಜಿಯವರು ತಿಳಿಸಿದ್ದಾರೆ.
ಯಾರ ಮನವೊಲಿಕೆಗೂ ತಾವು ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ ದಿಂಗಾಲೇಶ್ವರ ಸ್ವಾಮೀಜಿಯವರು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಒಂದೊಮ್ಮೆ ಕಾಂಗ್ರೆಸ್ ನಿಂದ ಅವರು ಸ್ಪರ್ಧಿಸಲು ಸಿದ್ಧರಿರದಿದ್ದರೆ ಅಥವಾ ಕಾಂಗ್ರೆಸ್ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು, ಅಂತಹ ಸಂದರ್ಭದಲ್ಲಿ ಧಾರವಾಡ ಲೋಕಸಭಾ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವುದು ನಿಶ್ಚಿತವಾಗಿದೆ. ಇದು ಯಾರಿಗೆ ಅನುಕೂಲಕರವಾಗಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.