ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆ ಅಕ್ರಮ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿಬಂದಿದ್ದ ಆರೋಪದ ಬೆನ್ನಲ್ಲೇ ಇದೀಗ ಸಚಿವ ಬೈರತಿ ಸುರೇಶ್, ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಮುಡಾದಿಂದ ನಿವೇಶನ ಪಡೆದಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಮುಡಾ ಬದಲಿ ಸೈಟ್ ಪಡೆದವರ ಪಟ್ಟಿಯಲ್ಲಿ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರೂ ಇದೆ. ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಸಿ.ಎನ್.ಮಂಜೇಗೌಡ, ಹೆಚ್.ವಿಶ್ವನಾಥ್, ಮಹದೇವಸ್ವಾಮಿ, ಗಂಗರಾಜು ಸೇರಿದಂತೆ ಹಲವರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಇವರೆಲ್ಲರಿಗೂ ಮುಡಾದಿಂದ ಬದಲಿ ನಿವೇಶನ ಹಂಚಿಕೆಯಾಗಿದೆ. ತನಿಖಾ ಆಗೋಗದ ಮುಂದೆ ಇದೆಲ್ಲ ಅಕ್ರಮವೋ? ಸಕ್ರಮವೋ ಎಂಬುದು ಬಯಲಾಗಲಿದೆ ಎಂದು ಹೇಳಿದರು.
ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು, ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಮುಡಾದಿಂದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕೂಡ ನಿವೇಶನ ಪಡೆದುಕೊಂಡಿದ್ದಾರೆ ಎಂದು ಲಿಸ್ಟ್ ಬಿಡುಗಡೆ ಮಾಡುವ ಮೂಲಕ ಸರ್ಕಾರ ವಿಪಕ್ಷಗಳಿಗೆ ತಿರುಗೇಟು ನೀಡಿದೆ.