![](https://kannadadunia.com/wp-content/uploads/2022/08/378842-karnataka-high-court.jpg)
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ-ಇಡಿ ಜಾರಿಗೊಳಿಸಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆಯಾಜ್ಞೆಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಮೂಲಕ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಇಡಿ ಜಾರಿ ಮಾಡಿದ್ದ ಸಮನ್ಸ್ ಪ್ರಶ್ನಿಸಿ, ಸಮನ್ಸ್ ರದ್ದುಗೊಳಿಸುವಂತೆ ಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಸಿಎಂ ಪತ್ನಿ ಪರ ವಕೀಲ ಸಂದೇಶ್ ಗೌಡ ವಾದ ಮಂಡಿಸಿದರೆ, ಸಚಿವ ಭೈರತಿ ಸುರೇಶ್ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ.
ವಾದ ಆಲಿಸಿದ ಹೈಕೋರ್ಟ್, ಫೆಬ್ರವರಿ 20ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಿಸಿ ಆದೇಶ ಹೊರಡಿಸಿದೆ. ಮುಂದಿನ ವಿಚಾರಣೆಯನ್ನು ಫೆ.20ಕ್ಕೆ ನಿಗದಿಗೊಳಿಸಿದ್ದು, ಅಲ್ಲಿಯವರೆಗೂ ಯಾವುದೇ ವಿಚಾರಣೆ ನಡೆಸುವಂತಿಲ್ಲ ಎಂದು ಇಡಿ ಅಧಿಕಾರಿಗಳಿಗೆ ಸೂಚಿಸಿದೆ.