ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಲ್ಲಿ ಬದಲಿ ಭೂಮಿ ಪಡೆದವರ ಪಟ್ಟಿಯನ್ನು ಜಾಹೀರಾತು ಮೂಲಕ ಬಹಿರಂಗಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮುಡಾದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಹಗರಣ ಸಂಪೂರ್ಣ ಬಯಲಿಗೆ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು.
ಮುಡಾ ಅಕ್ರಮ ಪ್ರಕರಣವನ್ನು ಸಿಬಿಐಗೆ ಕೊಡಬೇಕು ಎಂಬ ಬಿಜೆಪಿ ಆಗ್ರಹದ ವಿಚಾರವಾಗಿ ಮಾತನಾಡಿದ ಸಚಿವರು, ಇಲಿ ಹೋಯ್ತು, ಕೋತಿ ಹೋಯ್ತು ಅಂದ್ರೂ ಸಿಬಿಐಗೆ ಕೊಡಿ ಅಂದ್ರೆ ಹೇಗೆ? ನಮ್ಮ ಅಧಿಕಾರಿಗಳು ತನಿಖೆ ಮಾಡಲು ಸಮರ್ಥರಿದ್ದಾರೆ. ಬಿಜೆಪಿ ಅವಧಿಯಲ್ಲಿ ಎಷ್ಟು ಪ್ರಕರಣ ಸಿಬಿಐಗೆ ಕೊಟ್ಟಿದ್ದಾರೆ? ಎಂದು ಪ್ರಶ್ನಿಸಿದರು.
ಮುಡಾದಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳ ಸಮಿತಿ ರದ್ದು ಮಾಡಲು ಸಿಎಂ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದೇನೆ. ಮೂರು ಮಂದಿಯ ಸಮಿತಿ ಅಷ್ಟೇ ಇರಲಿ ಎಂದಿದ್ದೇನೆ. ಅದಕ್ಕೆ ಸಿಎಂ ಕೂಡ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.