ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದೆ.
ಹೈಕೋರ್ಟ್ ಏಕಸದಸ್ಯಪೀಠದಲ್ಲಿ ಅರ್ಜಿ ವಿಚಾರಣೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ರವಿವರ್ಮ ಕುಮಾರ್ ವಾದ ಮಂಡಿಸುತ್ತಿದ್ದಾರೆ. ರಾಜ್ಯಪಾಲರ ಪರ ತುಷಾರ್ ಮೆಹ್ತಾ ವಾದ ಮಂಡನೆ ಮಾಡುತ್ತಿದ್ದಾರೆ.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ ಅಡಿಯಲ್ಲಿ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಆದರೆ ಆರೋಪಿತ ಘಟನೆ ನಡೆದಾಗ ಭಾರತೀಯ ನ್ಯಾಯ ಸಂಹಿತೆ ಜಾರಿಯಲ್ಲಿರಲಿಲ್ಲ. ಹೀಗಾಗಿ ರಾಜ್ಯಪಾಲರ ಅನುಮತಿಯೇ ಕಾನೂನು ಬಾಹಿರ ಎಂದು ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಿದ್ದಾರೆ.
ಅಲ್ಲದೇ ಸಿಎಂ ಪತ್ನಿ ಪಾರ್ವತಿ ಹಾಗೂ ಅವರ ಸಹೋದರನ ವಿರುದ್ಧ ಆರೋಪವಿದೆ. ಪತ್ನಿ ಹಾಗೂ ಮೈದುನನ ಲೋಪಗಳಿಗೆ ಸಿಎಂ ಜವಾಬ್ದಾರಿಯಾಗುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಕೀಲ ತುಷಾರ್ ಮೆಹ್ತಾ, ಪತ್ನಿ ಪರವಾಗಿ ಪತಿಗೆ ಪವಿತ್ರವಾದ ಹೊಣೆಗಾರಿಕೆ ಇರುತ್ತದೆ. ಎಲ್ಲಾ ಲೋಪಗಳನ್ನು ಪತಿ, ಪತ್ನಿ ಮೇಲೆ ಹೊರಿಸಬಾರದು ಎಂದು ವಾದ ಮಂಡಿಸಿದ್ದಾರೆ. ಸಿಎಂ ಪರ ಹಾಗೂ ರಾಜ್ಯಪಾಲರ ಪರ ವಕೀಲರ ವಾದ-ಪ್ರತಿವಾದ ಹೈಕೋರ್ಟ್ ನಲ್ಲಿ ಮುಂದುವರೆದಿದ್ದು, ಇಂದೇ ತೀರ್ಪು ಹೊರಬೀಳಲಿದೆಯೇ ಅಥವಾ ಹೈಕೋರ್ಟ್ ತೀರ್ಪು ಕಾಯ್ದಿರಿಸಲಿದೆಯೇ? ಕಾದುನೋಡಬೇಕಿದೆ.