ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಕಚೇರಿಯಿಂದ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಚಿವ ಹೆಚ್.ಕೆ ಪಾಟೀಲ್ ರಾಜ್ಯಪಾಲರ ಕಚೇರಿಯಿಂದ ಅವರಿಗೆ ನೋಟಿಸ್ ಬಂದಿದೆ. ತಪ್ಪು ಗ್ರಹಿಕೆಯಿಂದ ನೋಟಿಸ್ ನೀಡಲಾಗಿದೆ ಎಂಬುದಾಗಿ ಅವರು ಹೇಳಿದರು. ಸಿಎಂ ಸಿದ್ದರಾಮಯ್ಯಗೆ ನೀಡಿರುವ ಶೋಕಾಸ್ ನೋಟಿಸ್ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಬಿಜೆಪಿ ಶಾಸಕರ ನಿಯೋಗವು ಜುಲೈ 25 ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಲು ಮತ್ತು ಮುಖ್ಯಮಂತ್ರಿಯ ರಾಜೀನಾಮೆಗೆ ಕೋರಿ ಮನವಿಯನ್ನು ಸಲ್ಲಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಬಿಜೆಪಿ ಮನವಿ ಪತ್ರವನ್ನು ಸಲ್ಲಿಸಿರುವುದರಿಂದ, ರಾಜ್ಯಪಾಲರು ಮುಖ್ಯಮಂತ್ರಿಯಿಂದ ಉತ್ತರವನ್ನು ಕೇಳುವುದು ಅನಿವಾರ್ಯವಾಗಿದೆ. ಅದರಂತೆ ರಾಜ್ಯಪಾಲರು ಮುಖ್ಯಮಂತ್ರಿಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.