ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ಆರಂಭಿಸಿದ್ದಾರೆ. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ನಾಯಕರು ಎಐಸಿಸಿ ವರಿಷ್ಠರನ್ನು ಭೇಟಿಯಾಗಿದ್ದು, ಮುಂದಿನ ನಡೆ ಬಗ್ಗೆ ಚರ್ಚೆ ನಡೆಸಿದ್ದಾರೆ.
ಮುಡಾ ಕದನ ದೆಹಲಿಯ ಹೈಕಮಾಂಡ್ ಅಂಗಳ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ಆರಂಭವಾಗಿದೆ.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಹೆಚ್.ಸಿ.ಮಹದೇವಪ್ಪ, ಜಮೀರ್ ಅಹ್ಮದ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ವಿರುದ್ಧ ಯಾವ ರೀತಿ ಹೋರಾಟ ನಡೆಸಬೇಕು ಹಾಗೂ ರಾಜಕೀಯವಾಗಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳೇನು ಎಂಬ ಬಗ್ಗೆ ಚರ್ಚೆ ನಡೆಸಲಿದ್ದಾರೆ.