![](https://kannadadunia.com/wp-content/uploads/2024/09/snehamai-krishna.jpg)
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಹೈಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಹೈಕೋರ್ಟ್ ನಲ್ಲಿ ನಮಗೆ ಹಿನ್ನಡೆಯಾಗಿದೆ. ಹಾಗಂತ ನನ್ನ ಹೋರಾಟ ನಿಲ್ಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ನನ್ನ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.
ಹೈಕೋರ್ಟ್ ಆದೇಶವನ್ನು ಕೂಲಂಕುಷವಾಗಿ ಪರಿಶೀಲಿಸುತ್ತೇನೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುತ್ತೇನೆ. ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿರುವುದು ನಿಜ. ಸಿದ್ದರಾಮಯ್ಯನವರು ಸಿಎಂ ಆಗಿರುವುದರಿಂದ ಲೋಕಾಯುಕ್ತ ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ತನಿಖೆಯಲ್ಲಿ ನಂಬಿಕೆ ಇಲ್ಲ. ಹಾಗಾಗಿ ಸಿಬಿಐ ತನಿಖೆಗೆ ಕೋರಿದ್ದೇನೆ. ಹೈಕೋರ್ಟ್ ಆದೇಶ ಕೈಗೆ ಸಿಕ್ಕ ಕೂಡಲೇ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುತ್ತೇನೆ ಎಂದು ಹೇಳಿದರು.