ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದೆ. ಆದರೆ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ.
ಇಂದು ಹೈಕೋರ್ಟ್ ನಲ್ಲಿ ಸ್ನೇಹಮಯಿ ಕೃಷ್ಣ ಪರ ವಕೀಲ ಕೆ.ಜಿ.ರಾಘವನ್, ಮುಡಾ ಪ್ರಕರಣದಲ್ಲಿ ನಮಗೆ ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆ ಇಲ್ಲ. ಹಾಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಲಾಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಸರ್ಕಾರದ ಪರ ಅಭಿಯೋಜಕ ಜಗದೀಶ್, ಈಗಾಗಲೇ ಲೋಕಾಯುಕ್ತ ತನಿಖೆ ಆರಂಭವಾಗಿದೆ. ನಮಗೆ ವಾದಮಂಡನೆಗೆ 2 ವಾರಗಳ ಕಾಲ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿದೆ.
ಅಲ್ಲದೇ ನವೆಂಬರ್ 25ರವರೆಗೆ ನಡೆದ ತನಿಖೆಯ ಸಂಪೂರ್ಣ ವಿವರ ಸಲ್ಲಿಸುವಂತೆ ಹೈಕೋರ್ಟ್ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಮುಡಾ ಕೇಸ್ ನಲ್ಲಿ ಲೋಕಾಯುಕ್ತ ತನಿಖೆಯೇ ಮುಂದುವರೆಯಲಿದೆಯೇ? ಅಥವಾ ಸಿಬಿಐಗೆ ವರ್ಗಾವಣೆಯಾಗಲಿದೆಯೇ? ಕಾದುನೋಡಬೇಕಿದೆ.