ಬೆಂಗಳೂರು : ಮುಡಾ ಹಗರಣ ಸಂಬಂಧ ರಾಜ್ಯಪಾಲರು ನೀಡಿದ ನೋಟೀಸ್ ಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.
ಮೈಸೂರಿನ ಸಿದ್ದರಾಮಯ್ಯ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮ. ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ.
ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ 2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿ ಮೋದಿ ಅವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ ಎಂದು ಹೇಳಿದ್ದಾರೆ.