ಮುಂಬೈ: ಮುಂಬೈನ ವರ್ಲಿ ಪ್ರದೇಶದಲ್ಲಿ 20 ತಿಂಗಳ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ತಾಯಿಯ ಹೇಳಿಕೆಯ ಆಧಾರದ ಮೇಲೆ, ವರ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ವಿರುದ್ಧ ಐಪಿಸಿಯ ಸೆಕ್ಷನ್ 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ಒಂದೇ ಪ್ರದೇಶದ ನಿವಾಸಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ಪ್ರಕಾರ, ಬಾಲಕಿಯ ತಾಯಿ ಸ್ವಲ್ಪ ಸಮಯದವರೆಗೆ ಮನೆಯಿಂದ ಹೊರಗೆ ಹೋಗಿದ್ದಾಗ ಆರೋಪಿ ಬಾಲಕಿಯನ್ನು ತನ್ನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
ಸಂತ್ರಸ್ತೆಯ ತಾಯಿ ಹಿಂದಿರುಗಿದಾಗ, ಬಾಲಕಿ ಅಳುತ್ತಿದ್ದಳು. ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ, ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಬಾಲಕಿಯ ತಾಯಿ ಸಮೀಪದ ಪೊಲೀಸ್ ಠಾಣೆಗೆ ಬಂದು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ.