ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನ ಬಿಡುಗಡೆಯಾಗಿ ಹೊರಬರುತ್ತಿದ್ದಂತೆಯೇ ರಾಮನಗರ ಪೊಲೀಸರು ಬಂಧಿಸಿದ್ದಾರೆ. ಮುನಿರತ್ನ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ ಮೇಲ್ ಕೇಸ್ ದಾಖಲಾಗಿದ್ದು, ಈ ಪ್ರಕರಣದಲ್ಲಿ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಮುನಿರತ್ನ ವಿರುದ್ಧದ ಪ್ರಕರಣ ಹಾಗೂ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ನನಗೆ ಮಾಹಿತಿ ಇಲ್ಲ. ಇಲ್ಲಿ ಯರನ್ನೂ ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕು ಎಂದು ಹೇಳಿದರು.
ಪ್ರಕರಣದ ಬಗ್ಗೆ ತನಿಖೆಯಾಗಲಿ, ಸತ್ಯಾಸತ್ಯತೆ ಏನೆಂದು ಹೊರಬರಲಿ. ಮುನಿರತ್ನ ಪ್ರಕರಣದಲ್ಲಿ ಎಲ್ಲೋ ಒಂದುಕಡೆ ರಾಜ್ಯ ಸರ್ಕಾರದ ತರಾತುರಿ ನೋಡಿದರೆ ರಾಜಕೀಯ ಷಡ್ಯಂತ್ರವಿದೆ ಎಂಬುದನ್ನೂ ನಾವು ಗಮನಿಸಬೇಕಾಗುತ್ತದೆ. ಮೊದಲು ಪ್ರಕರಣದ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆಯಾಗಲಿ ಸತ್ಯಾಸತ್ಯತೆ ಹೊರಬರಲಿ ಎಂದು ಹೇಳಿದರು.