
ಬೆಂಗಳೂರು: ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ (ವಿಶೇಷ ತನಿಖಾ ತಂಡ) ರಚನೆ ಮಾಡಿ ಆದೇಶ ಹೊರಡಿಸಿದೆ.
ಎಸ್ಐಟಿ ತನಿಖಾ ತಂಡದ ಮುಖ್ಯಸ್ಥರನ್ನಾಗಿ ಬಿ.ಕೆ.ಸಿಂಗ್ ಅವರನ್ನು ನೇಮಕ ಮಾಡಿದೆ. ಬಿ.ಕೆ.ಸಿಂಗ್ ನೇತೃತ್ವದ ಎಸ್ಐಟಿ ತನಿಖಾ ತಂಡದಿಂದ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆ ನಡೆಯಲಿದೆ.
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಶಾಸಕ ಜೈಲು ಸೇರುತ್ತಿದ್ದಂತೆ ಮುನಿರತ್ನ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ ಮೇಲ್, ಹನಿಟ್ರ್ಯಾಪ್ ಪ್ರಕರಣ ದಾಖಲಾಗಿತ್ತು. ಜೈಲಿನಿಂದ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಮುನಿರತ್ನ ಅವರನ್ನು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದರು. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಈ ಮಧ್ಯೆ ರಾಜ್ಯ ಸರ್ಕಾರ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.