
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಲಾಗಿದೆ. ಮೃತ ವ್ಯಕ್ತಿಯ ಅಳಿಯನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದ ರಾಜಪ್ಪ(55) ಎಂಬುವರನ್ನು ಬುಧವಾರ ರಾತ್ರಿ ಕೊಲೆ ಮಾಡಲಾಗಿದೆ. ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ರಾಜಪ್ಪ ಕೊಲೆಯಾಗಿದ್ದು, ಅವರ ಅಳಿಯ ಮಂಜುನಾಥ(45) ಎಂಬುವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮೃತನ ಪುತ್ರಿ ಮನೆಗೆ ಹೋಗಿ ಬಾಗಿಲು ತೆರೆದಾಗ ರಾಜಪ್ಪ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಅವರಿಗೆ ಮೂವರು ಪುತ್ರಿಯರಿದ್ದಾರೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಆರೋಪಿ ಮಂಜುನಾಥ ಮೃತರ ಎರಡನೇ ಪುತ್ರಿಯ ಪತಿಯಾಗಿದ್ದಾನೆ. ಇತ್ತೀಚೆಗೆ ಅಪರಾಧ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದಿದ್ದ ಮಂಜುನಾಥನ ವಿರುದ್ಧ ಅನೇಕ ಕ್ರಿಮಿನಲ್ ಕೇಸುಗಳು ದಾಖಲಾಗಿದೆ ಎಂದು ಹೇಳಲಾಗಿದೆ.