ಚಿತ್ರದುರ್ಗ : ಮುರುಘಾ ಶ್ರೀಗಳ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಕಾರ್ಯದರ್ಶಿ ಪರಮಶಿವಯ್ಯಗೆ ಜಾಮೀನು ಮಂಜೂರಾಗಿದೆ.
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಪರಮಶಿವಯ್ಯಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಆಗಸ್ಟ್ 28ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಪರಮಶಿವಯ್ಯ ಅವರನ್ನು ಎರಡು ತಿಂಗಳ ನಂತರ ಪೊಲೀಸರು ಬಂಧಿಸಿದ್ದರು.