ಬೆಂಗಳೂರು: ಕಟ್ಟಕಡೆಯ ಮನುಷ್ಯನಿಗೂ ಕಡಿಮೆ ದರದಲ್ಲಿ ಮರಳು ಲಭ್ಯವಾಗುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಇಂದು ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಶಿಯೇಷನ್ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಚಿವರು, ರಾಜ್ಯದಲ್ಲಿ ಬಂಡವಾಳ ಹೂಡುವ ಉದ್ಯಮಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು. ಇದಕ್ಕಾಗಿ ವಿನೂತನ ಯೋಜನೆ ರೂಪಿಸಲಾಗಿದೆ ಎಂದು ಹೇಳಿದ್ದಾರೆ.
ಮರಳು, ಕಲ್ಲುಕ್ವಾರಿ ಉದ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಹೊಸ ಮರಳು ನೀತಿ ಶೀಘ್ರವೇ ಜಾರಿಗೆ ಬರಲಿದೆ. ಅನೇಕ ಸುಧಾರಣೆ ಜಾರಿಯಾಗಲಿದೆ. ಕಟ್ಟಕಡೆಯ ಮನುಷ್ಯರಿಗೂ ಸುಲಭವಾಗಿ ಮರಳು ಸಿಗುವ ವ್ಯವಸ್ಥೆ ಮಾಡಲಾಗುವುದು. ಕ್ವಾರಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಬೇಡಿಕೆಗಳನ್ನು ಬಜೆಟ್ನಲ್ಲಿ ಈಡೇರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.