ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆ.ಆರ್.ಎಸ್ ಜಲಾಶಯ ಭರ್ತಿಯಾಗಿದೆ. ಕಾವೇರಿ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ, ಇನ್ನೊಂದೆಡೆ ಹೇಮಾವತಿ ನದಿ ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಆತಂಕ ಹಿನ್ನೆಲೆಯಲ್ಲಿ ಈ ಭಾಗದ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಪ್ರವಾಸಿ ತಾಣದಲ್ಲಿ ಅಪಾಯದ ಸ್ಥಿತಿ ನಿರ್ಮಾಣವಾಗಿರುವುದರಿಂದ ಮುತ್ತತ್ತಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಕೆ.ಎನ್.ಲೋಕೇಶ್ ಆದೇಶ ಹೊರಡಿಸಿದ್ದಾರೆ.
ಮುತ್ತತ್ತಿ ಪ್ರವಾಸಿ ತಾಣಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಭಗದಲ್ಲಿ ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮುತ್ತತ್ತಿ ರಸ್ತೆಯ ಗಾಣಾಳು ಜಲಪಾತದ ಬಳಿ ಬಿದ್ದು ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ವರದಿ ಹಿನ್ನೆಲೆಯಲ್ಲಿ ಜಲಪಾತ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ.