ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಸಿದ್ಧತೆ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಖಾಸಗಿ ದರ್ಬಾರ್ ಗೆ ಸಿದ್ಧತೆ ನಡೆದಿದೆ. ಅಕ್ಟೋಬರ್ 9ರಂದು ಅರಮನೆಯ ದರ್ಬಾರ್ ಹಾಲ್ ನಲ್ಲಿ ಸಿಂಹಾಸನ ಜೋಡಣೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಅರಮನೆ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿಷೇಧಿಸಲಾಗಿದೆ.
ಅಕ್ಟೋಬರ್ 15ರಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸುವುದರಿಂದ ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ಅಕ್ಟೋಬರ್ 23ರಂದು ಅರಮನೆಯಲ್ಲಿ ಆಯುಧ ಪೂಜೆ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರಮನೆ ಪ್ರವೇಶ ನಿಷೇಧಿಸಲಾಗಿದೆ.
ಅಕ್ಟೋಬರ್ 24ರಂದು ವಿಜಯದಶಮಿ ಹಿನ್ನೆಲೆಯಲ್ಲಿ ಅಂದು ಇಡೀ ದಿನ ಸಾರ್ವಜನಿಕರಿಗೆ ಅರಮನೆ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಬಳಿಕ ನವೆಂಬರ್ 8ರಂದು ಸಿಂಹಾಸನ ವಿಸರ್ಜನೆ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೂ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ಅವಕಾಶವಿರುವುದಿಲ್ಲ ಎಂದು ಅರಮನೆ ಮಂಡಳಿ ಮಾಹಿತಿ ನೀಡಿದೆ.