ಮೈಸೂರು: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಬೆನ್ನಲ್ಲೇ ಜೆಡಿಎಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅಲ್ಪಸಂಖ್ಯಾತ ನಾಯಕರು ಸೇರಿದಂತೆ ಹಲವು ನಾಯಕರು ರಾಜೀನಾಮೆಗೆ ಮುಂದಾಗಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಜೆಡಿಎಸ್ ನ ಶಾಸಕರೇ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದು, ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ. ಈ ನಡುವೆ ಮೈಸೂರು ಭಾಗದ ಜೆಡಿಎಸ್ ನ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಮೈಸೂರು ನಗರದ ಎನ್.ಆರ್.ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ರಾಜ್ಯ ಕಾರ್ಯದರ್ಶಿ ಶಾಹಿದ್ ನೇತೃತ್ವದಲ್ಲಿ ಮುಸ್ಲಿಂ ಮುಖಂಡರು ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಅಂಚೆ ಮೂಲಕವಾಗಿ ರಾಜ್ಯಾಧ್ಯಕ್ಷರಿಗೆ ರವಾನಿಸಿದ್ದಾರೆ.
ಜಾತ್ಯಾತೀತ ಎಂಬ ಕಾರಣಕ್ಕೆ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ್ದೆವು. ಆದರೆ ಈಗ ಚುನಾವಣೆ ಕಾರಣಕ್ಕೆ ಕೋಮುವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿರುವುದು ಸರಿಯಲ್ಲ. ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಕೋಮು ಸೌಹಾರ್ದತೆ ಹಾಳು ಮಾಡುವ ಕೆಲಸವಾಗಿದೆ. ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಇಬ್ಬರನ್ನೂ ಪಕ್ಷದಿಂದ ಉಚ್ಛಾಟಿಸಿ ಎಂದು ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂಗೆ ಮನವಿ ಮಾಡಿದ್ದೆವು. ಆದರೆ ಅವರು ಸ್ಪಂದಿಸಿಲ್ಲ. ಈಗ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಇದರಿಂದ ಸಾಮೂಹಿಕ ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ದಾರೆ.