ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಗಳ ಬಂಧನಕ್ಕೆ ರಾಜ್ಯದ ಹಲವೆಡೆ ಭಾರಿ ಪ್ರತಿಭಟನೆ ನಡೆಸಲಾಗಿದೆ.
ರಾಷ್ಟ್ರೀಯ ಮಹಿಳಾ ಆಯೋಗ ಹಾಗೂ ರಾಜ್ಯ ಮಹಿಳಾ ಆಯೋಗ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮಕೈಗೊಂಡಿವೆ.
ಎಡಿಜಿಪಿ ಪ್ರತಾಪ್ ರೆಡ್ಡಿ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಸಂತ್ರಸ್ತರಿಂದ ಮಾಹಿತಿಯನ್ನು ಕೂಡ ಪಡೆದುಕೊಂಡಿದ್ದಾರೆ. ಇದು ಸವಾಲಿನ ಪ್ರಕರಣವಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.
ಕಾಮುಕರು ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ ಮೊಬೈಲ್ನಲ್ಲಿ ದೃಶ್ಯ ಚಿತ್ರೀಕರಿಸಿಕೊಂಡಿದ್ದಾರೆ. ವಿದ್ಯಾರ್ಥಿನಿಯೊಂದಿಗೆ ಇದ್ದ ಯುವಕನನ್ನು ಥಳಿಸಿದ್ದು, ಮೂರು ಲಕ್ಷ ರೂಪಾಯಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಹಣ ಕೊಡದಿದ್ದರೆ ಬೆತ್ತಲೆ ದೃಶ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಹಾಗೆ ಬೆದರಿಕೆ ಹಾಕಿ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದ್ದು ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಮೈಸೂರಿಗೆ ತೆರಳಿ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.