
ಮೈಸೂರು: ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶನಿವಾರ ಕೊಳ್ಳೇಗಾಲ ಕ್ಷೇತ್ರದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಮಹೇಶ್ ಅವರಿಗೆ ದಿಢೀರ್ ಎದೆ ನೋವು ಕಾಣಿಸಿಕೊಂಡಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ನಂತರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹೇಶ್ ಅವರಿಗೆ ಆಂಜಿಯೋಗ್ರಾಮ್ ಸೇರಿದಂತೆ ವಿವಿಧ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಪಡೆದ ಮಹೇಶ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ವೈದ್ಯರ ಸಲಹೆ ಮೇರೆಗೆ ಒಂದು ದಿನ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದು, ಈಗ ಆರೋಗ್ಯ ಸುಧಾರಿಸಿದೆ ಎಂದು ಹೇಳಲಾಗಿದೆ.