ಬೆಂಗಳೂರು: ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.
ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರನ್ನು ರಾಯಚೂರು ಸಂಸದ ಜಿ. ಕುಮಾರ ನಾಯಕ್ ನೇತೃತ್ವದ ನಿಯೋಗ ಇತ್ತೀಚೆಗೆ ಭೇಟಿ ಮಾಡಿ ರಾಯಚೂರು ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ ಮನವಿ ಸಲ್ಲಿಸಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು ಅನುಮತಿ ನೀಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ರಾಯಚೂರಿನಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ವಿಶೇಷ ಕಾಳಜಿ ವಹಿಸಿ ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ನಡೆಸಿದ್ದರು. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ನಿಟ್ಟಿನಲ್ಲಿ ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರದಿಂದ ಹಸಿರು ನಿಶಾನೆ ಸಿಕ್ಕಿದೆ. ಎಂದು ಸಚಿವ ಬೋಸರಾಜು ತಿಳಿಸಿದ್ದಾರೆ.