ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸೈಬರ್ ಠಾಣೆಯಲ್ಲಿ 5 ಕೇಸ್ ದಾಖಲಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರು ಹಾಗೂ ಸುರತ್ಕಲ್ ನಲ್ಲಿ ಫಾಸಿಲ್ ಹತ್ಯೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್, ಕಾಮೆಂಟ್ ಮಾಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಈ ಬಗ್ಗೆ ನಿಗಾವಹಿಸಿ ಕಾರ್ಯಾಚರಣೆ ನಡೆಸಿದೆ. ಇದರ ಆಧಾರದ ಮೇಲೆ ಐದು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಈ ಪ್ರಕರಣಗಳಲ್ಲಿ ಆರೋಪಿಗಳು ವರ್ಷಾನುಗಟ್ಟಲೆ ಕೋರ್ಟಿಗೆ ಅಲೆಯಬೇಕಾಗುತ್ತದೆ. ಈ ಬಗ್ಗೆ ಎಚ್ಚರ ವಹಿಸಬೇಕು. ಬಂಧನವಾದಾಗ ಆರೋಪಿಗಳ ಬಗ್ಗೆ ಅಧಿಕೃತ ಮಾಹಿತಿ ನೀಡಲಾಗುವುದು. ವಿನಾಕಾರಣ ಬಂಧಿಸಲಾಗಿದೆ ಎಂದು ಪ್ರಚಾರ ಮಾಡಿದರೆ ತನಿಖೆಗೆ ಅಡ್ಡಿಯಾಗುತ್ತದೆ. ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.