ಬೆಂಗಳೂರು: ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿವೆ. ನಾಗಮಂಗಲದಲ್ಲಿ ಕೋಮುಗಲಭೆಯಾಗಿದ್ದು, ಇದು ಒಂದು ಸಮುದಾಯದ ಪುಂಡರ ಉದ್ದೇಶಪೂರ್ವಕ ದಾಂಧಲೆ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೆಟ್ರೋಲ್ ಬಾಂಬ್ ಎಸೆದು ಕೋಮುಗಲಭೆಗೆ ಪ್ರಚೋದನೆ ನೀಡಿದ ಮುಸ್ಲಿಂ ಗಲಭೆಕೋರರನ್ನು ಬಂಧಿಸುವುದನ್ನು ಬಿಟ್ಟು ಸಮಿತಿಯ ಸದಸ್ಯರನ್ನು ಬಂಧಿಸಿದ ಪೋಲೀಸರ ಕೃತ್ಯ ಅಕ್ಷಮ್ಯ ಎಂದು ಕಿಡಿಕಾರಿದ್ದಾರೆ.
ನಾಗಮಂಗಲ ಗಲಭೆ ವಿಚಾರವಾಗಿ ಕೊಡಲೇ ಉನ್ನತ ಮಟ್ಟದ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಇನ್ನು ನಾಗಮಂಗಲದಲ್ಲಿ ನಡೆದ ಗಲಭೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳನ್ನು ಗುರಿಯಾಗಿಸಿ, ಹಿಂದು ಆಚರಣೆಗಳಿಗೆ ಅಡ್ಡಿಪಡಿಸುವ ಘಟನೆಗಳು ಹೆಚ್ಚುತ್ತಿವೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಇನ್ನೊಂದು ನಿದರ್ಶನವಾಗಿದೆ ಎಂದು ಕಿಡಿಕಾರಿದ್ದಾರೆ.
ಶಾಂತಿಯುತವಾಗಿ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ನಡೆಸಿದ್ದಾರೆ. ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸಿದ್ದಾರೆ. ನಾವು ನಾಗಮಂಗಲದಲ್ಲಿದ್ದೇವೆಯೋ ? ಪಾಕಿಸ್ತಾನದಲ್ಲೋ? ಎಂದು ವಾಗ್ದಾಳಿ ನಡೆಸಿದ್ದಾರೆ.