ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 52 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ, ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ. ಒಂದೊಂದೇ ಅಂಗಡಿಗಳು ಓಪನ್ ಆಗುತ್ತಿವೆ. ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು.
ಗಲಭೆಗೆ ಸಂಬಂಧಿಸಿದಂತೆ 6 ಎಫ್ಐಆರ್ ದಾಖಲಿಸಲಾಗಿದೆ. 52 ಜನರನ್ನು ವಶಕ್ಕೆ ಪಡೆಯಲಾಗಿದೆ. 54 ಜನರು ಗುಂಪು ಗೂಡಿ ಬಂದು ದಾಳಿ ನಡೆಸಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆ ಪೈಕಿ 52 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಉಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ಒಟ್ಟಾರೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ. ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಇಂತಹ ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.